ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಲಾಗಿದ್ದ 17ನೇ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯ ಪ್ರಶಸ್ತಿ ವಿಜೇತ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪತ್ರಕರ್ತ, ಕವಿ ಹಾಗೂ ಲೇಖಕ ಆನಂದ್ ಸಿ. ತಿರುಮಲ ಅವರಿಗೆ ಗೌರವ ಸನ್ಮಾನ ನೀಡಿ ಅಭಿನಂದಿಸಲಾಯಿತು.
ಬೆಂಗಳೂರಿನ ಡಾ. ಅಂಬರೀಷ್ ಸಭಾಂಗಣದಲ್ಲಿ ನಿರ್ಮಿಸಲಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್ ವೇದಿಕೆಯಲ್ಲಿ ನಡೆದ ಎರಡು ದಿನಗಳ ಸಾಹಿತ್ಯ ಸಮ್ಮೇಳನವನ್ನು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡವಿಲ್ಲದೆ ಶಿಕ್ಷಣ, ಉದ್ಯೋಗ ಹಾಗೂ ಆಡಳಿತವಿಲ್ಲ ಎಂಬ ಸನ್ನಿವೇಶವನ್ನು ಸರ್ಕಾರ ನಿರ್ಮಿಸಬೇಕು. ಕನ್ನಡಿಗರು ತಮ್ಮ ಭಾಷೆಯ ಉಳಿವಿಗಾಗಿ ಸರ್ಕಾರದ ಮುಂದೆ ಹಕ್ಕೊತ್ತಾಯ ಮಂಡಿಸಬೇಕು ಎಂದು ಕರೆ ನೀಡಿದರು. ಶಿಕ್ಷಣ ಕ್ಷೇತ್ರದಲ್ಲಿ ಕನ್ನಡಕ್ಕೆ ಆದ್ಯತೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ನೆಲದ ಭಾಷೆಯಲ್ಲಿ ಸಂವಾದ ನಡೆಸುವುದಕ್ಕೂ ಕಷ್ಟವಾಗುವ ಪರಿಸ್ಥಿತಿ ಎದುರಾಗಬಹುದು. ಕನ್ನಡಿಗರಿಗೆ ಗುಣಮಟ್ಟದ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ಭಾಷೆಯ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಿಸಬೇಕು ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿರುವ ಆನಂದ್ ಸಿ. ತಿರುಮಲ ಅವರನ್ನು ಗುರುತಿಸಿ ಗೌರವಿಸಲಾಯಿತು.
ಸಾಹಿತ್ಯವು ಕೇವಲ ಅಭಿವ್ಯಕ್ತಿಯ ಮಾಧ್ಯಮವಲ್ಲ; ಅದು ಸಮಾಜದಲ್ಲಿ ಜಾಗೃತಿ, ಮಾನವೀಯತೆ, ಸಮಾನತೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಪ್ರಬಲ ಸಾಧನವಾಗಿದೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಸಾಹಿತ್ಯದ ಉಳಿವು ಹಾಗೂ ಬೆಳವಣಿಗೆಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂಬ ಆಶಯ ಸಮ್ಮೇಳನದಲ್ಲಿ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಸಮ್ಮೇಳನಾಧ್ಯಕ್ಷ ಶೂದ್ರ ಶ್ರೀನಿವಾಸ್, 16ನೇ ಸಮ್ಮೇಳನಾಧ್ಯಕ್ಷೆ ಎಚ್.ಎಸ್. ಶ್ರೀಮತಿ, ಚಲನಚಿತ್ರ ನಟ ದೊಡ್ಡಣ್ಣ, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ. ಪ್ರಕಾಶಮೂರ್ತಿ, ಆನೇಕಲ್ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅದೂರು ಪ್ರಕಾಶ್, ಡಾ. ವಸುಂಧರಾ ಭೂಪತಿ, ಡಾ. ಜಿ.ಪಿ. ಮಂಗಳ ಜ್ಯೋತ್ಸ್ನಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಗೌರವ ಸನ್ಮಾನ ಸ್ವೀಕರಿಸಿದ ಆನಂದ್ ಸಿ. ತಿರುಮಲ ಅವರು ಕನ್ನಡ ನಾಡು, ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸೇವೆಯನ್ನು ಇನ್ನಷ್ಟು ಬದ್ಧತೆ ಹಾಗೂ ಉತ್ಸಾಹದಿಂದ ಮುಂದುವರಿಸುವ ಸಂಕಲ್ಪ ವ್ಯಕ್ತಪಡಿಸಿದರು.
