ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಸ್ಥಳದಲ್ಲೇ ಹಸುನಿಗಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಡೆಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಮೃತರನ್ನು ಬೆಂಗಳೂರಿನ ವೈಷ್ಣವಿ (20) ಮತ್ತು ಜಾಹ್ನವಿ (20) ಎಂದು ಗುರುತಿಸಲಾಗಿದೆ. ಇಬ್ಬರೂ ಬೆಂಗಳೂರಿನ ಸಪ್ತಗಿರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ಪ್ರಾಜೆಕ್ಟ್ ಕೆಲಸದ ನಿಮಿತ್ತ ವಿದ್ಯಾರ್ಥಿಗಳ ತಂಡ ಕಾರಿನಲ್ಲಿ ಕುಣಿಗಲ್ ಕಡೆಗೆ ಪ್ರಯಾಣಿಸುತ್ತಿತ್ತು.
ಈ ವೇಳೆ ಗುಡೆಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಸಮೀಪ ಸಾಗುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ವೈಷ್ಣವಿ ಮತ್ತು ಜಾಹ್ನವಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರು ಎಳೆದಿದ್ದಾರೆ .
ಮತ್ತೊಬ್ಬ ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕ
ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಉಳಿದ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ತೀವ್ರತೆಗೆ ಕಾರಿನೊಳಗೆ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹಾಗೂ ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಸ್ಥಳೀಯರು ಮತ್ತು ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರಕ್ಕೆ ಕರೆತಂದು ಸಮೀಪದ ನೆಲಮಂಗಲ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕಾಲೇಜಿನ ಪ್ರಾಜೆಕ್ಟ್ ಕೆಲಸಕ್ಕಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ತಂಡ ಅಪಘಾತಕ್ಕೀಡಾಗಿರುವುದು ಆಘಾತ ಮೂಡಿಸಿದೆ. ಇಬ್ಬರು ವಿದ್ಯಾರ್ಥಿನಿಯರ ಕುಟುಂಬಸ್ಥರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
