ನೆಲಮಂಗಲ: ಫ್ಲೈಓವರ್ ಬಳಿ ಭೀಕರ ಅಪಘಾತ- ಐವರ ದುರ್ಮರಣ

ನೆಲಮಂಗಲ:ನವಯುಗ ಟೋಲ್ ಸಮೀಪದ ಫ್ಲೈಓವರ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡುರಾತ್ರಿ ನಡೆದಿದೆ. ಡಿವೈಡರ್ ಹಾರಿ ಎದುರುಗಡೆಯಿಂದ ಬರುತ್ತಿದ್ದ KSRTC ಬಸ್‌ಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ತುಮಕೂರು ರಸ್ತೆಯಿಂದ ಬೆಂಗಳೂರು ನಗರದ ಕಡೆಗೆ ಟಾಟಾ ಇಂಡಿಕಾ ಕಾರಿನಲ್ಲಿ ಯುವಕರು ಪ್ರಯಾಣಿಸುತ್ತಿದ್ದರು. ಜಿಂದಾಲ್ ಆಸ್ಪತ್ರೆ ಸಮೀಪ ಕಾರು ಅತಿವೇಗದಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕ ನಿಯಂತ್ರಣ ಕಳೆದುಕೊಂಡು ಡಿವೈಡರ್ ದಾಟಿ ಎದುರು ಲೇನ್‌ಗೆ ಪ್ರವೇಶಿಸಿದೆ. ಅದೇ ಸಮಯದಲ್ಲಿ ಎದುರುಗಡೆಯಿಂದ ಬರುತ್ತಿದ್ದ KSRTC ಬಸ್‌ಗೆ ಕಾರು ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಳಗಿದ್ದ ಯುವಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ದೊಡ್ಡಬಳ್ಳಾಪುರ ನಿವಾಸಿಗಳಾದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಎಂದು ಗುರುತಿಸಲಾಗಿದೆ. ಹರ್ಷಿತ್ ಬೆಂಗಳೂರಿನ ರಾಜನಕುಂಟೆಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದರೆ, ಲಲಿತ್ ಸಿಸಿಟಿವಿ ಅಳವಡಿಕೆ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ KSRTC ಬಸ್‌ನ ಮುಂಭಾಗದ ಗ್ಲಾಸ್ ಚೂರುಚೂರು ಆಗಿದ್ದು, ಮುಂಭಾಗ ಕುಳಿತಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಚಾಲಕ ಹಾಗೂ ಕಂಡೆಕ್ಟರ್ ಕೂಡ ಸಣ್ಣ ಗಾಯಗಳಿಂದ ಪಾರಾಗಿದ್ದಾರೆ. ಬಸ್‌ನಲ್ಲಿದ್ದ 42 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ, ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ್ದು, ಅಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಈ ಅಪಘಾತ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆ ಕಾರಣವೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Spread the love

Leave a Reply

Your email address will not be published. Required fields are marked *