ಒಂದೇ ಕುಟುಂಬದ ,ತಂದೆ, ತಾಯಿ, ಮಗ ಅನುಮಾನಾಸ್ಪದ ಸಾ*

ಮಂಡ್ಯ: ಜಿಲ್ಲೆಯ ನೆಹರು ನಗರದಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದ್ದು, ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಜ್ಯೋತಿ ಮತ್ತು ಸಂತೋಷ್ ಅವರು ಕಳೆದ ರಾತ್ರಿ ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇಬ್ಬರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕ ಮತ್ತು ಆಘಾತ ಮೂಡಿದೆ.

ಇದೇ ವೇಳೆ ಇಂದು ಬೆಳಿಗ್ಗೆ ಪ್ರಭಾಕರ್ ಅವರು ನಗರದ ತಮ್ಮದೇ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಒಂದೇ ಕುಟುಂಬದ ಮೂವರು ಅಲ್ಪಾವಧಿಯಲ್ಲೇ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪ್ರಕರಣದ ಸುತ್ತ ನಿಗೂಢತೆ ಮನೆಮಾಡಿದೆ.

ಮೃತ ಸಂತೋಷ್ ಅವರಿಗೆ ಕೇವಲ ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದು, ಕುಟುಂಬದಲ್ಲಿ ಸಂತಸದ ವಾತಾವರಣ ಇರುವಾಗಲೇ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಮಂಡ್ಯ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು, ಸಾವಿಗೆ ನಿಖರ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷಾ ವರದಿ ಹಾಗೂ ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Spread the love

Leave a Reply

Your email address will not be published. Required fields are marked *