ದಾವಣಗೆರೆ: ಮಾವನೊಂದಿಗೆ ಜೇನು ಮುರಿಯಲು ತೆರಳಿದ್ದ 7 ವರ್ಷದ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಶಿನಾಯ್ಕ್ ಅವರ ಪುತ್ರ ಆದಿತ್ಯ (7) ಮೃತ ಬಾಲಕನಾಗಿದ್ದು, ಘಟನೆಯು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ.
ಮಾಹಿತಿಯ ಪ್ರಕಾರ, ಬುಧವಾರ ಬೆಳಗ್ಗೆ ಆದಿತ್ಯ ತನ್ನ ಮಾವ ತಾವರೆನಾಯ್ಕ್ ಜೊತೆ ಜೇನು ಮುರಿದುಕೊಂಡು ಬರಲು ಗ್ರಾಮದ ಹೊರವಲಯಕ್ಕೆ ತೆರಳಿದ್ದ. ಸಾಮಾನ್ಯವಾಗಿ ಕೆಲವೇ ಗಂಟೆಗಳಲ್ಲಿ ಮನೆಗೆ ವಾಪಸ್ಸಾಗಬೇಕಿದ್ದ ಇಬ್ಬರೂ ಸಂಜೆಯಾದರೂ ಮನೆಗೆ ಮರಳಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬ ಸದಸ್ಯರು ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ಇದಾದ ಬಳಿಕ ಕುಟುಂಬಸ್ಥರು ಜಗಳೂರು ಪೊಲೀಸ್ ಠಾಣೆಗೆ ದೂರು ನೀಡಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಾಗೂ ಗ್ರಾಮಸ್ಥರು ಬಾಲಕ ಮತ್ತು ಆತನ ಮಾವನಿಗಾಗಿ ಹುಡುಕಾಟ ಆರಂಭಿಸಿದ್ದರು.
ಇಂದು ಬೆಳಗ್ಗೆ ಗ್ರಾಮದ ಪಕ್ಕದಲ್ಲಿರುವ ಹಳ್ಳದಲ್ಲಿ ಬಾಲಕ ಆದಿತ್ಯನ ಮೃತದೇಹ ಪತ್ತೆಯಾಗಿದೆ. ಬಾಲಕನ ಶವ ಪತ್ತೆಯಾಗುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಬೆಳಗ್ಗೆ ಮಾವನೊಂದಿಗೆ ತೆರಳಿದ್ದ ಬಾಲಕ ಇಂದು ಶವವಾಗಿ ಪತ್ತೆಯಾಗಿರುವುದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಘಟನೆಯ ಬಳಿಕ ಮಾವ ತಾವರೆನಾಯ್ಕ್ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಾಲಕನನ್ನು ಕೊಲೆ ಮಾಡಿ ಮೃತದೇಹವನ್ನು ಹಳ್ಳದಲ್ಲಿ ಬಿಸಾಡಿ ಪರಾರಿಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಈ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ. ಆದರೆ ಬಾಲಕನ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ನಾಪತ್ತೆಯಾಗಿರುವ ತಾವರೆನಾಯ್ಕ್‌ಗಾಗಿ ವಿಶೇಷ ಶೋಧ ಕಾರ್ಯ ಕೈಗೊಂಡಿದ್ದಾರೆ. ಆತನ ಪತ್ತೆಯಾದ ಬಳಿಕ ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ. ಜೊತೆಗೆ ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.
ಸದ್ಯ ಆದಿತ್ಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದು ಅಪಘಾತದಿಂದ ಸಂಭವಿಸಿದ ಸಾವೋ ಅಥವಾ ಕೊಲೆ ಪ್ರಕರಣವೋ ಎಂಬ ಕುರಿತು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
