ಹೊಸಪೇಟೆ: ಎಸ್ಟಿ ಸಮುದಾಯಕ್ಕೆ ಶೇ.7ರಷ್ಟು ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲೂಕು ವಾಲ್ಮೀಕಿ ನಾಯಕ ಸಮಾಜದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ. ಪ್ರಸನ್ನಾನಂದ ಮಹಾಸ್ವಾಮಿಗಳ ಆದೇಶದ ಮೇರೆಗೆ ಪ್ರತಿಭಟನೆ ನಡೆಸಿದ ಮುಖಂಡರು, ಮೀಸಲಾತಿ ರದ್ದುಗೊಳಿಸಿರುವ ರಾಜ್ಯ ಉಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿ, ಅನುಭವಿ ಹಿರಿಯ ವಕೀಲರನ್ನು ನೇಮಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
ರಾಜ್ಯದಲ್ಲಿ ಸುಸಜ್ಜಿತ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಎಸ್ಟಿ ಜಾತಿ ಪ್ರಮಾಣಪತ್ರಗಳ ದುರ್ಬಳಕೆ ತಡೆದು, ಅರ್ಹರಿಗೆ ಮಾತ್ರ ಜಾತಿ ಮತ್ತು ಸಿಂಧುತ್ವ ಪ್ರಮಾಣಪತ್ರಗಳನ್ನು ವಿತರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬೇಡಿಕೆಗಳನ್ನು ಈಡೇರಿಸದಿದ್ದರೆ ಸ್ವಾಮೀಜಿಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ತಾಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಗುಂಡಿ ರಾಘವೇಂದ್ರ, ಧರ್ಮದರ್ಶಿ ಬಿ.ಎಸ್. ಜಂಬಯ್ಯ ನಾಯಕ ಸೇರಿದಂತೆ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
