ನೆಲಮಂಗಲ: ಯುವಜನರು ಶಿಕ್ಷಣದ ಜೊತೆಗೆ ಜೀವನಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸೇವಾ ಮನೋಭಾವ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಯುವ ಶಕ್ತಿ ಕರ್ನಾಟಕದ ರಾಜ್ಯ ಸಂಚಾಲಕ ಚಿಕ್ಕಮಾರನಹಳ್ಳಿ ಅನಂತ್ ಹೇಳಿದರು.
ನೆಲಮಂಗಲ ತಾಲ್ಲೂಕಿನ ಕಂಬಾಳು ಗ್ರಾಮದ ವಿಶ್ವಾರಾಧ್ಯ ದೇಶಿಕೇಂದ್ರ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಸೌಂದರ್ಯ ಸಂಯುಕ್ತ ಪದವಿಪೂರ್ವ ಕಾಲೇಜು ಆಯೋಜಿಸಿದ್ದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಸಂವಹನ ಕೌಶಲ್ಯ, ನಾಯಕತ್ವ ಗುಣ, ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಹಾಗೂ ತಂಡವಾಗಿ ಕೆಲಸ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಪ್ರಾಯೋಗಿಕ ಜ್ಞಾನ ಮತ್ತು ಕೌಶಲ್ಯಗಳು ವ್ಯಕ್ತಿಯ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಯುವಜನರು ತಮ್ಮ ವೈಯಕ್ತಿಕ ಬೆಳವಣಿಗೆಯೊಂದಿಗೆ ಸಮಾಜದ ಅಗತ್ಯಗಳನ್ನೂ ಅರ್ಥಮಾಡಿಕೊಳ್ಳಬೇಕು. ಗ್ರಾಮಗಳ ಸ್ವಚ್ಛತೆ, ಪರಿಸರ ಸಂರಕ್ಷಣೆ, ಶಿಕ್ಷಣದ ಮಹತ್ವದ ಅರಿವು ಮೂಡಿಸುವುದು ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಸಮಾಜದಿಂದ ಪಡೆದ ಅವಕಾಶಗಳನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಯುವಕ ಮತ್ತು ಯುವತಿಯ ಮೇಲಿದೆ ಎಂದು ಹೇಳಿದರು.
ಎನ್ಎಸ್ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು, ಸಹಕಾರ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ಉತ್ತಮ ವೇದಿಕೆಯಾಗಿವೆ. ಇಂತಹ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಗ್ರಾಮೀಣ ಜನರ ಬದುಕು, ಅವರ ಸಮಸ್ಯೆಗಳು ಮತ್ತು ಅಗತ್ಯಗಳನ್ನು ಅರಿತುಕೊಂಡು ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು. ಸೇವೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಯುವಜನರು ಮುಂದಾಗಬೇಕು ಎಂದು ಕರೆ ನೀಡಿದರು.
ಸಮಾಜದ ಬೆಳವಣಿಗೆಯಲ್ಲೂ ಯುವಜನರ ಪಾತ್ರ ಮುಖ್ಯ
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಯೋಧ ಶಿವಕುಮಾರ್, ಯುವಜನರು ತಮ್ಮ ವೈಯಕ್ತಿಕ ಅಭಿವೃದ್ಧಿಯ ಜೊತೆಗೆ ಸಮಾಜದ ಪ್ರಗತಿಗೂ ಶ್ರಮಿಸಬೇಕು. ಸೇವಾ ಮನೋಭಾವ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಜೀವನದಲ್ಲಿ ಅಳವಡಿಸಿಕೊಂಡು, ಇತರರ ಏಳಿಗೆಗೂ ಸಹಕಾರ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ನರಸಿಂಹಸ್ವಾಮಿ, ಉಪನ್ಯಾಸಕ ಮಂಜುನಾಥ್ ಸಿ.ಪಿ, ಶಿಬಿರದ ಸಂಯೋಜಕರಾದ ಅರ್ಜುನ್, ವಿಜಯ್, ಹರೀಶ್ ಮತ್ತು ಚೈತ್ರ ಉಪಸ್ಥಿತರಿದ್ದರು.
