ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ನೀಡಿದ್ದ ಗಡುವು ಮುಕ್ತಾಯದ ಹಂತಕ್ಕೆ ತಲುಪುತ್ತಿದ್ದಂತೆ ರೈತರು ವಿವಿಧ ಸಕ್ಕರೆ ಕಾರ್ಖಾನೆಗಳ ಗೋದಾಮುಗಳಿಗೆ ಮುತ್ತಿಗೆ ಹಾಕಿ, ಕಬ್ಬಿನ ಬೆಲೆ ನಿಗದಿಯಾಗುವವರೆಗೆ ಸಕ್ಕರೆ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ, ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ ಕಬ್ಬಿನ ದರ ನಿಗದಿ ಕುರಿತು ಮಹತ್ವದ ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರ ರಚಿಸಿರುವ ಸಮಿತಿಯೂ ರಾಜ್ಯಕ್ಕೆ ಆಗಮಿಸುತ್ತಿದೆ.
ನಾಲ್ಕನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಹೋರಾಟ: ಕಬ್ಬಿಗೆ ಸೂಕ್ತ ಬೆಲೆ ಸಿಗಬೇಕೆಂಬ ರೈತರ ಬೇಡಿಕೆಗೆ ಇನ್ನೂ ಪರಿಹಾರ ದೊರೆತಿಲ್ಲ. ಪ್ರತಿ ಟನ್ ಕಬ್ಬಿಗೆ ಒಟ್ಟು 5,500 ರೂಪಾಯಿ ದರ ನೀಡಬೇಕು ಎಂಬುದು ರೈತರ ಪ್ರಮುಖ ಆಗ್ರಹವಾಗಿದೆ. ಇದರಲ್ಲಿ ರಾಜ್ಯ ಸರ್ಕಾರ 1,000 ರೂಪಾಯಿ ಪ್ರೋತ್ಸಾಹ ಧನ ನೀಡಬೇಕು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರು ಕನಿಷ್ಠ 4,500 ರೂಪಾಯಿ ಪಾವತಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.
ಗುರ್ಲಾಪುರದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವ ನಿರ್ಧಾರಕ್ಕೆ ಬಂದಿರುವ ರೈತರು, ನಿಪ್ಪಾಣಿ-ಮೂಡಲಗಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಹಾಗೂ ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.
ಗಡುವು ಮುಕ್ತಾಯ: ಹೋರಾಟ ತೀವ್ರಗೊಳಿಸಲು ನಿರ್ಧಾರ: ಕಬ್ಬಿನ ಬೆಲೆ ನಿಗದಿಪಡಿಸುವಂತೆ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ರೈತರು ನೀಡಿರುವ ಗಡುವು ಇಂದು ರಾತ್ರಿ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಮತ್ತು ಶಶಿಕಾಂತ ಗುರೂಜಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕರೆ ನೀಡಿದ್ದಾರೆ.
ಇದರ ಭಾಗವಾಗಿ ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳ ಗೋದಾಮುಗಳಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ಗೋದಾಮುಗಳಿಗೆ ಬೀಗ ಹಾಕುವ ಮೂಲಕ ಕಬ್ಬಿನ ಬೆಲೆ ನಿಗದಿಯಾಗುವವರೆಗೆ ಸಕ್ಕರೆಯನ್ನು ಹೊರಗೆ ಸಾಗಿಸಬಾರದು ಎಂದು ಒತ್ತಾಯಿಸಿದ್ದಾರೆ. ರೈತರ ಬೇಡಿಕೆ ಈಡೇರದಿದ್ದರೆ ಹೋರಾಟವನ್ನು ಇನ್ನಷ್ಟು ವಿಸ್ತರಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಇದಲ್ಲದೆ, ಸಕ್ಕರೆಯ ಮಾರಾಟ ದರ ಪ್ರತಿ ಕೆಜಿಗೆ 50 ರೂಪಾಯಿಗಿಂತ ಕಡಿಮೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಚೂನಪ್ಪ ಪೂಜಾರಿ ಆಗ್ರಹಿಸಿದ್ದಾರೆ. ಕಬ್ಬು ಬೆಳೆಗಾರರಿಗೆ ಉತ್ಪಾದನಾ ವೆಚ್ಚಕ್ಕೆ ತಕ್ಕ ಬೆಲೆ ಸಿಗಬೇಕು ಮತ್ತು ಅವರ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ದೊರೆಯಬೇಕು ಎಂಬುದು ರೈತರ ಒತ್ತಾಯವಾಗಿದೆ.
15ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಗೋದಾಮುಗಳಿಗೆ ಮುತ್ತಿಗೆ: ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರು ಸಕ್ಕರೆ ಕಾರ್ಖಾನೆಗಳ ಗೋದಾಮುಗಳಿಗೆ ಮುತ್ತಿಗೆ ಹಾಕಿದ್ದಾರೆ. ಮೂಡಲಗಿ ತಾಲೂಕಿನ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಒಡೆತನದ ಸತೀಶ್ ಶುಗರ್ಸ್, ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿರುವ ಕತ್ತಿ ಕುಟುಂಬದ ಒಡೆತನದ ವಿಶ್ವರಾಜ್ ಸಕ್ಕರೆ ಕಾರ್ಖಾನೆ ಹಾಗೂ ಮಾಜಿ ಸಚಿವ ಶ್ರೀಮಂತ್ ಪಾಟೀಲ್ ಅವರ ಒಡೆತನದ ಸಕ್ಕರೆ ಕಾರ್ಖಾನೆ ಸೇರಿದಂತೆ 15ಕ್ಕೂ ಹೆಚ್ಚು ಕಾರ್ಖಾನೆಗಳ ಗೋದಾಮುಗಳ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ.
ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಕಾರ್ಖಾನೆಗಳ ಆಡಳಿತ ಮಂಡಳಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಕಬ್ಬಿನ ದರ ಅಂತಿಮವಾಗುವವರೆಗೆ ಸಕ್ಕರೆ ಮಾರಾಟ ಮತ್ತು ಸಾಗಾಟ ಮಾಡಬಾರದು ಎಂದು ಒತ್ತಾಯಿಸಲಾಗಿದೆ. ರೈತರ ಮನವಿಗೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಸ್ಪಂದಿಸಿವೆ ಎಂದು ಹೋರಾಟಗಾರರು ತಿಳಿಸಿದ್ದಾರೆ.
ಇದೇ ವೇಳೆ, ಅಕ್ಟೋಬರ್ 31ರಂದು ಬೃಹತ್ ಹೋರಾಟ ನಡೆಸಲು ರೈತರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ನಡೆಸಿ, ರೈತರ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.
“ನಾವು ಬೆಂಗಳೂರಿಗೆ ಬರಲ್ಲ, ಸಮಿತಿಯೇ ಬೆಳಗಾವಿಗೆ ಬರಲಿ”: ಕಬ್ಬಿನ ಬೆಲೆ ವಿವಾದಕ್ಕೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ರಚಿಸಿರುವ ಸಮಿತಿ ನಾಳೆ ರಾಜ್ಯಕ್ಕೆ ಆಗಮಿಸಲಿದೆ. ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರ ಅಭಿಪ್ರಾಯಗಳನ್ನು ಆಲಿಸಿ ಸಮಸ್ಯೆ ಪರಿಹರಿಸುವ ಪ್ರಯತ್ನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರೈತ ಮುಖಂಡರಾದ ಚೂನಪ್ಪ ಪೂಜಾರಿ ಮತ್ತು ಶಶಿಕಾಂತ ಗುರೂಜಿ ಅವರನ್ನು ಬೆಂಗಳೂರಿಗೆ ಬರುವಂತೆ ಸಂಪರ್ಕಿಸಲಾಗಿದೆ ಎನ್ನಲಾಗಿದೆ.
ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಚೂನಪ್ಪ ಪೂಜಾರಿ, ಕಬ್ಬು ಬೆಳೆಯುವ ಪ್ರಮುಖ ಪ್ರದೇಶಗಳು ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿವೆ. ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಬೆಳೆಯಲಾಗುತ್ತಿದ್ದು, ರೈತರ ಸಮಸ್ಯೆಯ ನೈಜ ಸ್ಥಿತಿಯನ್ನು ಅಧಿಕಾರಿಗಳು ಸ್ಥಳಕ್ಕೆ ಬಂದು ಅರಿಯಬೇಕು ಎಂದು ಹೇಳಿದ್ದಾರೆ.
“ನಾವು ಬೆಂಗಳೂರಿಗೆ ಬರುವುದಿಲ್ಲ. ಸಮಿತಿಯೇ ಬೆಳಗಾವಿಗೆ ಬರಲಿ. ನಾವು ಯಾರೂ ಬೆಂಗಳೂರಿಗೆ ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿರುವ ಅವರು, ರೈತರ ಅಹವಾಲುಗಳನ್ನು ಬೆಳಗಾವಿಯಲ್ಲಿಯೇ ಆಲಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಬೆಳಗಾವಿ ಜಿಲ್ಲೆಯಲ್ಲಿ ರೈತರ ಹೋರಾಟ ತೀವ್ರಗೊಂಡಿದ್ದು, ಕಾರ್ಖಾನೆಗಳ ಗೋದಾಮುಗಳಿಗೆ ಮುತ್ತಿಗೆ ಹಾಕುವ ಮೂಲಕ ರೈತರು ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ನಾಳೆ ನಡೆಯಲಿರುವ ಸಭೆ ಹಾಗೂ ಕೇಂದ್ರ ಸಮಿತಿಯ ಮುಂದಿನ ಕ್ರಮಗಳ ಮೇಲೆ ರೈತರ ನಿರೀಕ್ಷೆ ನೆಟ್ಟಿದೆ. ಕಬ್ಬಿನ ದರದ ಕುರಿತು ಒಮ್ಮತದ ನಿರ್ಧಾರ ಕೈಗೊಳ್ಳಲಾಗುತ್ತದೆಯೇ ಮತ್ತು ಹೋರಾಟಕ್ಕೆ ಪರಿಹಾರ ದೊರೆಯುತ್ತದೆಯೇ ಎಂಬುದು ಮುಂದಿನ ಬೆಳವಣಿಗೆಗಳಿಂದ ತಿಳಿಯಬೇಕಿದೆ.
ರೈತರ ಹೋರಾಟ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ಸರ್ಕಾರ ಶೀಘ್ರ ನಿರ್ಧಾರ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ. ಕಬ್ಬು ಕಟಾವು, ಸಾಗಣೆ ಹಾಗೂ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ದರದ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. ರೈತರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಸರ್ಕಾರ ಮತ್ತು ಕಾರ್ಖಾನೆಗಳ ಆಡಳಿತ ಮಂಡಳಿಗಳು ಒಟ್ಟಾಗಿ ಪರಿಹಾರ ಕಂಡುಕೊಳ್ಳಬೇಕು ಎಂಬುದು ಹೋರಾಟಗಾರರ ಒತ್ತಾಯವಾಗಿದೆ.
ಇನ್ನೊಂದೆಡೆ, ಅಕ್ಟೋಬರ್ 31ರಂದು ಬೃಹತ್ ಪ್ರತಿಭಟನೆ ನಡೆಸಲು ರೈತರು ಸಿದ್ಧತೆ ಮಾಡಿಕೊಳ್ಳುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಹೋರಾಟದ ಸ್ವರೂಪ ಮತ್ತಷ್ಟು ಬದಲಾಗುವ ಸಾಧ್ಯತೆಯಿದೆ. ಕೇಂದ್ರ ಸಮಿತಿ ಬೆಳಗಾವಿಗೆ ಭೇಟಿ ನೀಡಿ ರೈತರ ಅಹವಾಲುಗಳನ್ನು ಆಲಿಸಬೇಕು ಹಾಗೂ ಕಬ್ಬಿನ ದರದ ಕುರಿತು ಸಂಬAಧಪಟ್ಟವರೊAದಿಗೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ. ಮುಂದಿನ ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಸ್ಪಂದನೆ ದೊರೆಯುತ್ತದೆಯೇ ಎಂಬುದರ ಮೇಲೆ ಹೋರಾಟದ ಮುಂದಿನ ಹಂತ ನಿರ್ಧಾರವಾಗಲಿದೆ.
