ನೆಲಮಂಗಲ: ಅಕ್ರಮವಾಗಿ ಕಸಾಯಿಖಾನೆಗೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನೆಲಮಂಗಲ ಡಿವೈಎಸ್ಪಿ ಉಮಾರಾಣಿ ನೇತೃತ್ವದ ಪೊಲೀಸ್ ತಂಡ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿ 73 ಜಾನುವಾರುಗಳನ್ನು ರಕ್ಷಣೆ ಮಾಡಿದೆ. ಕಾರ್ಯಾಚರಣೆ ವೇಳೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಸಮೀಪದ ಕೂತಗಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ರಾತ್ರಿ ಸುಮಾರು 2 ಗಂಟೆಯ ವೇಳೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಡಿವೈಎಸ್ಪಿ ಉಮಾರಾಣಿ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ತೆರಳಿ ದಾಳಿ ನಡೆಸಿದೆ.

ಈ ವೇಳೆ ಲಾರಿಯಲ್ಲಿ 70 ಎಮ್ಮೆಗಳು ಹಾಗೂ 3 ಹಸುಗಳು ಸೇರಿದಂತೆ ಒಟ್ಟು 73 ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿ, ಸಾಗಾಟಕ್ಕೆ ಬಳಸಿದ್ದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದೇ ವೇಳೆ ಲಾರಿಯಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಜಾನುವಾರುಗಳನ್ನು ಎಲ್ಲಿಂದ ತರಲಾಗಿತ್ತು, ಎಲ್ಲಿಗೆ ಸಾಗಿಸಲಾಗುತ್ತಿತ್ತು ಹಾಗೂ ಸಾಗಾಟದ ಹಿಂದೆ ಯಾರ ಕೈವಾಡವಿದೆ ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಮಧ್ಯರಾತ್ರಿ ನಡೆದ ಈ ಕಾರ್ಯಾಚರಣೆಯಲ್ಲಿ 73 ಜಾನುವಾರುಗಳು ರಕ್ಷಣೆಯಾಗಿವೆ.

Spread the love

Leave a Reply

Your email address will not be published. Required fields are marked *